Cnewstv | 14.07.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ.
ಬೆಂಗಳೂರು : ಅಭಿನಯ ಸರಸ್ವತಿ ಖ್ಯಾತಿಯ ಬಿ ಸರೋಜಾದೇವಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಟಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ (Bengaluru) ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು.
ಜನವರಿ 7, 1938ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಇವರು ಸ್ಯಾಂಡಲ್ವುಡ್ ಅಲ್ಲದೇ ಬಹುಭಾಷಾ ಸ್ಟಾರ್ ನಟರ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದರು.
ಅಭಿನಯ ಸರಸ್ವತಿ ಎಂದೇ ಖ್ಯಾತರಾದ ಬಿ.ಸರೋಜಾದೇವಿ ಅವರು ದಕ್ಷಿಣ ಭಾರತದ ಧೀಮಂತ ಅಭಿನೇತ್ರಿಯಲ್ಲೋರ್ವರು. ಸುಮಾರು 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಒದಗಿಸಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ ‘ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ, ಲಕ್ಷ್ಮೀಸರಸ್ವತಿ, ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು.
ಸರೋಜಾದೇವಿ ಅವರು ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿದ್ದಾರೆ.
ಕೊಡಿಗೆಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬ ವರ್ಗ ಸಿದ್ದತೆ ನಡೆಸುತ್ತಿದೆ. ಪತಿ ಹರ್ಷ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮಲ್ಲೆಶ್ವರಂನಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಇದಿ…
C News TV Kannada News Online in cnewstv