
ಶಿವಮೊಗ್ಗ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಬುಧವಾರ ಸಂಜೆ ಶಿವಮೊಗ್ಗ ನಗರದಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅವರು ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಕುಂದುಕೊರತೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನಿಲಯದ ಸಮಸ್ಯೆಗಳನ್ನು ಸಿಇಒ ಅವರೊಂದಿಗೆ ತೋಡಿಕೊಂಡರು. ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್ ಬರ್ನರ್ ಯಂತ್ರ ಲಭ್ಯವಿರುವುದಿಲ್ಲ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ನಿಲಯದಲ್ಲಿ ಬಯೋಮೆಟ್ರಿಕ್ ಹಾಜರಾತಿ ಯಂತ್ರ ಸುಮಾರು 2ತಿಂಗಳಿನಿಂದ ಹಾಳಾಗಿದ್ದು ರಿಪೇರಿ ಮಾಡಿಸಿರುವುದಿಲ್ಲ. ಇದರಿಂದ ವಿದ್ಯಾರ್ಥಿಗಳ ಹಾಜರಾತಿ ನಿಖರವಾಗಿ ದಾಖಲಿಸಲು ಸಾಧ್ಯವಾಗುತ್ತಿಲ್ಲ. ಇದನ್ನು ತಕ್ಷಣ ಸರಿಪಡಿಸುವಂತೆ ಅವರು ಸೂಚನೆ ನೀಡಿದರು.
ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇದನ್ನು ಅಕ್ವಾಗಾರ್ಡ್ ಆರ್‍ಒ ಉಪಯೋಗಿಸಬೇಕು. ಪ್ರತಿ ತಿಂಗಳಿಗೊಮ್ಮೆ ನೀರಿನ ಟ್ಯಾಂಕ್ ತೊಳೆಯಬೇಕು. ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅಡುಗೆ ಕೋಣೆಯನ್ನು ಸಹ ಸ್ವಚ್ಛವಾಗಿರಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗುತ್ತಿದ್ದು, ಉತ್ತಮವಾದ ಶುಚಿರುಚಿಯಾದ ಆಹಾರ ಒದಗಿಸಬೇಕು ಎಂದು ಹೇಳಿದರು.

ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕರು ಗೈರು ಹಾಜರಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಇಲಾಖಾ ಅಧಿಕಾರಿ ಅವರಿಗೆ ಸೂಚನೆ ನೀಡಿದರು.
C News TV Kannada News Online in cnewstv