ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಡಿ 945ಕೋಟಿ ರೂ. ಮೊತ್ತದ ಅಂದಾಜಿನ 50ಕಾಮಗಾರಿಗಳಿಗೆ ಮಂಜೂರಾತಿ ದೊರೆತಿದ್ದು, ಅನುಷ್ಟಾನ ಕಾರ್ಯ ಇನ್ನಷ್ಟು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಅವರು ಗುರುವಾರ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಅತಿವೃಷ್ಟಿಯಿಂದಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳೆದ ಕೆಲವು ತಿಂಗಳಿನಲ್ಲಿ ನಿರೀಕ್ಷಿತ ವೇಗದಲ್ಲಿ ನಡೆದಿರುವುದಿಲ್ಲ. ಇದೀಗ ಅಗತ್ಯ ತಾಂತ್ರಿಕ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಅನುಷ್ಟಾನ ವೇಗ ಪಡೆದುಕೊಂಡಿದೆ. ಕಾಮಗಾರಿ ಅನುಷ್ಟಾನ ಇಲಾಖೆಗಳಾಗಿರುವ ಮೆಸ್ಕಾಂ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಅರಣ್ಯ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರತಿ ವಾರ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಕಳಪೆ ಕಾಮಗಾರಿ ಕಂಡು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ 234ಕೋಟಿ ರೂ. ವೆಚ್ಚದಲ್ಲಿ 3ಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಟ್ಯಾಂಕ್ ಮೊಹಲ್ಲಾ ಉದ್ಯಾನವನ ಮತ್ತು ಇ-ಗ್ರಂಥಾಲಯ ಮೂಲಸೌಕರ್ಯ ಕಾಮಗಾರಿಗಳು ಪೂರ್ಣಗೊಂಡಿವೆ. ಅಂದಾಜು 3ಕೋಟಿ ರೂ. ವೆಚ್ಚದಲ್ಲಿ 15ಕನ್ಸರ್ವೆನ್ಸಿನಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. 7.83ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಾರ್ಕ್ ಹಾಗೂ ನೆಹರು ಸ್ಟೇಡಿಯಂ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.
ಸುಮಾರು 5ಕೋಟಿ ರೂ. ವೆಚ್ಚದಲ್ಲಿ 9ಶಾಲೆಗಳು, 2ಕಾಲೇಜು ಮತ್ತು 4ಗ್ರಂಥಾಲಯಗಳನ್ನು ಸ್ಮಾರ್ಟ್ ಲೈಬ್ರರಿಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. 538ಕೋಟಿ ರೂ. ವೆಚ್ಚದಲ್ಲಿ 108ಕಿಮಿ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಇದರಲ್ಲಿ 2.80ಕಿಮಿ ಹೆರಿಟೇಜ್ ವಾಕ್ ಸೇರಿದೆ. 20ಕೋಟಿ ರೂ. ವೆಚ್ಚದಲ್ಲಿ ಇನ್ನೂ 7ಪಾರ್ಕ್ ಅಭಿವೃದ್ಧಿ ಮಾಡಲಾಗುತ್ತಿದೆ. 130ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿ ದಂಡೆ ಅಭಿವೃದ್ಧಿಗೆ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಕಾಮಗಾರಿ ಆದಷ್ಟು ಬೇಗನೇ ಆರಂಭವಾಗಲಿದೆ. 123ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಟೆಂಡರ್ ಹಂತದಲ್ಲಿವೆ. 63ಕೋಟಿ ರೂ. ಮೊತ್ತದ ಕಾಮಗಾರಿಗಳು ಡಿಪಿಆರ್ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು..
Recent Comments