ಶಿವಮೊಗ್ಗ : ಕರೋನಾ ವೈರಸ್ ಸೋಂಕು ಜಿಲ್ಲೆಗೆ ಬರುವುದನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮವಾಗಿ ರೈಲ್ವೇ ಸ್ಟೇಷನ್ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆ ಮಾಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು.
ಜ್ವರ, ನೆಗಡಿ, ಕೆಮ್ಮುನಂತಹ ರೋಗ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿ, ಕರೋನಾ ವೈರಸ್ ಪರೀಕ್ಷೆ ನಡೆಸಬೇಕು. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್‍ಗಳಲ್ಲಿ ಕ್ರಿಮಿನಾಶಕಗಳನ್ನು ನಿಯಮಿತವಾಗಿ ಸಿಂಪಡಿಸುವ ಕಾರ್ಯ ಆರಂಭಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸರ್ಕಾರಿ ಕಚೇರಿಗಳಲ್ಲಿ ಸೂಕ್ತ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಈಗಾಗಲೇ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ರೀತಿ ಜಾತ್ರೆ ಮತ್ತು ಮದುವೆ ಸಮಾರಂಭಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡದಂತೆ ಸೂಚನೆ ನೀಡಲಾಗಿದೆ. ಎಲ್ಲಾ ಮಾಲ್, ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಕರೋನಾ ವೈರಸ್ ಕುರಿತಂತೆ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವಂತಹ, ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಂದೇಶಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿರುವ ಪ್ರಯೋಗಾಲಯದಲ್ಲಿ ಇದುವರೆಗೆ 34 ಶಂಕಿತ ಪ್ರಕರಣಗಳ ಪರೀಕ್ಷೆ ನಡೆಸಲಾಗಿದ್ದು, ಎಲ್ಲಾ ಪ್ರಕರಣಗಳು ನೆಗೆಟಿವ್ ಬಂದಿವೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 5 ಪರೀಕ್ಷೆ ನಡೆಸಲಾಗಿದೆ. ನೆರೆಯ ರಾಜ್ಯಗಳಿಂದಲೂ ಪರೀಕ್ಷೆಗಾಗಿ ಸ್ಯಾಂಪಲ್‍ಗಳನ್ನು ಸ್ವೀಕರಿಸಲಾಗಿದೆ. ಜಿಲ್ಲೆಯಲ್ಲಿ ವಿದೇಶಗಳಿಂದ ಆಗಮಿಸಿದ 49ಮಂದಿಯ ಮೇಲೆ ನಿಗಾ ಇರಿಸಲಾಗಿದ್ದು, 14ದಿನಗಳ ಕಾಲ ನಿಗಾ ಇರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಮಾಹಿತಿ ನೀಡಿದರು.
ಮೆಗ್ಗಾನ್‍ನಲ್ಲಿ ಸಧ್ಯ 30 ಹಾಸಿಗೆಯ ಐಸೋಲೇಶನ್ ವಾರ್ಡ್ ಸಜ್ಜುಗೊಳಿಸಲಾಗಿದ್ದು, ಇನ್ನೂ 100 ಬೆಡ್ ವಾರ್ಡ್ ಸಿದ್ಧಪಡಿಸಲಾಗುತ್ತಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ 100ಬೆಡ್ ಐಸೋಲೇಶನ್ ವಾರ್ಡ್ ಸಜ್ಜುಗೊಳಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
Recent Comments