ಶಿವಮೊಗ್ಗ : ಕಂಟೈನ್‍ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚಿಸಿದರು.
ಜಿಲ್ಲೆಯಲ್ಲಿ 10 ಕಂಟೈನ್‍ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅವರು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸುವ ಕುರಿತು ಅರಿವು ಮೂಡಿಸುವುದರ ಜತೆಗೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ಇನ್ನು ಮುಂದೆ ಮಾಸ್ಕ್ ಧರಿಸದವರಿಗೆ ಜಿಲ್ಲಾಧಿಕಾರಿ ಕಚೇರಿ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಅವರು ಸೂಚನೆ ನೀಡಿದರು.
C News TV Kannada News Online in cnewstv