ಶಿವಮೊಗ್ಗ : ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆ ತರಲು ವ್ಯವಸ್ಥಿತವಾದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ 22ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ. ಇವರ ಪೈಕಿ 9ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಲಾಗಿದ್ದು, ಇನ್ನುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 2ನೇ ತರಗತಿಯಿಂದ 10ನೇ ತರಗತಿವರೆಗೆ ಒಟ್ಟು 44994 ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಒಟ್ಟು 219ಉರ್ದು ಶಾಲೆಗಳಿದ್ದು, 44933ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 610 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಅವರು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ತಿಂಗಳಲ್ಲಿ 25ದಿನ ಮಧ್ಯಾಹ್ನದ ಪೌಷ್ಟಿಕ ಆಹಾರ, ಮೊಟ್ಟೆ ಹಾಲು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 2052 ಗರ್ಭಿಣಿಯರು ಮತ್ತು 1904 ಬಾಣಂತಿಯರು ಮತ್ತು 5ಮಂದಿ ಕಿಶೋರಿಯರು, 6ವರ್ಷದೊಳಗಿನ 19311 ಮಕ್ಕಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಉಪನಿರ್ದೇಶಕರು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಮೌಲಾನಾ ಆಜಾದ್ ಫೌಂಡೇಶನ್ ವತಿಯಿಂದ 9ರಿಂದ 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. 8-10ನೇ ತರಗತಿ ವಿದ್ಯಾರ್ಥಿನಿಯರಿಗೆ 5ಸಾವಿರ ರೂ. ಮತ್ತು 11-12ನೇ ತರಗತಿ ವಿದ್ಯಾರ್ಥಿನಿಯರಿಗೆ 6ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಯೋಜನೆಯಡಿ ಗ್ರಾಂಟ್ ಇನ್ ಏಯ್ಡ್, ಸೀಕೋ ಔರ್ ಕಮಾಯೋ ಯೋಜನೆಯಡಿ ವೃತ್ತಿ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಧರ್ಮಪ್ಪ ಅವರು ತಿಳಿಸಿದರು.
Recent Comments