ಶಿವಮೊಗ್ಗ: ಉಪ ಚುನಾವಣಾ ಫಲಿತಾಂಶದ ಬಳಿಕ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳುವ ಮೂಲಕ ಜನರ ದಿಕ್ಕುತಪ್ಪಿಸಿದ್ದ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ನಾಯಕರೇ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿದೆ. ಕರ್ನಾಟಕದ ಶಿರಾ ಮತ್ತು ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸಿದ್ದರಾಮಯ್ಯ ಉಪಚುನಾವಣೆ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ ಎಂದಿದ್ದರು. ಕಾಂಗ್ರೆಸ್ ನಾಯಕರ ಮಾತನ್ನು ನಾವು ಸವಾಲಾಗಿ ಸ್ವೀಕರಿಸಿದ್ದೇವೆ. ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ಹೇಳಿದರು. ಇನ್ನು ಬಿಹಾರ ಹಾಗೂ ಮಧ್ಯಪ್ರದೇಶ ಚುನಾವಣೆಯಲ್ಲೂ ಎನ್ ಡಿಎ ಮೇಲುಗೈ ಸಾಧಿಸಿದೆ. ಇದನ್ನೆಲ್ಲಾ ನೋಡಿದರೆ ಮತ್ತೆ ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
C News TV Kannada News Online in cnewstv