Breaking News

ವದಂತಿಗಳಿಗೆ ಕಿವಿಗೊಡಬೇಡಿ. ಶಿವಮೊಗ್ಗದಲ್ಲಿ ಶಾಂತಿ ಕಾಪಾಡಲು ಬಿಗಿ ಬಂದೋಬಸ್ತು : ಐಜಿಪಿ ರವಿ

 

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಯಿಸಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾಗಿದ್ದು, ಪೊಲೀಸ್ ಬಂದೋಬಸ್ತು ತೀವ್ರಗೊಳಿಸಲಾಗಿದೆ. 9ಚೆಕ್‍ಪೋಸ್ಟ್‍ಗಳಲ್ಲಿ ಬಿಗಿ ಬಂದೋಬಸ್ತು ಮಾಡಲಾಗಿದ್ದು, ಹೊರಗಿನಿಂದ ಬರುವವರ ಮೇಲೆ ನಿಗಾ ಇರಿಸಲಾಗಿದೆ. 22ಚೀತಾ ಮತ್ತು 13 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ಇರಿಸಿದೆ. ಯಾವುದೇ ಕಾರಣಕ್ಕೂ ಪರಿಸ್ಥಿತಿ ಬಿಗಡಾಯಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಎಲ್ಲಾ ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ 144ನಿಷೇಧಾಜ್ಞೆ ವಿಧಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಫ್ರ್ಯೂ ಮುಂದುವರೆಸಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕೆಂದು ಅವರು ಮನವಿ ಮಾಡಿದರು.

ಕಠಿಣ ಕ್ರಮ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವ, ಯಾವುದೇ ವರ್ಗ ಅಥವಾ ಸಮುದಾಯದ ವಿರುದ್ಧ ಅಪರಾಧ ಮಾಡುವಂತೆ ಪ್ರಚೋದಿಸುವ ಬರಹಗಳನ್ನು ವಾಟ್ಸಾಪ್, ಫೇಸ್‍ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಹರಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

*