Cnewstv.in / 12.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದು, ಸಮಿತಿಯ ವರದಿಯ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಕೋವಿಡ್‍ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಟ 75 ಮಕ್ಕಳ ಐಸಿಯು ಬೆಡ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ,.5ಕ್ಕಿಂತ ಕೆಳಗೆ ಇಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ವೈದ್ಯಕೀಯ ಸೇವೆ ಉತ್ತಮಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆ ಇರಿಸಿದೆ. ಇದೇ ಮೊದಲ ಬಾರಿಗೆ 1780 ವೈದ್ಯರನ್ನು ರಾಜ್ಯದಲ್ಲಿ ನೇರ ನೇಮಕಾತಿ ಮೂಲಕ ಪಡೆದುಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರ ನೇಮಕ ಮಾಡಲಾಗಿದ್ದು, ಇದರಲ್ಲಿ 29 ಮಂದಿ ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೊಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments