Cnewstv.in / 19.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಇಂದು ಮುಖ್ಯಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕಳೆದ 18ದಿನಗಳಲ್ಲಿ ಸರಾಸರಿಗಿಂತ ಶೇ.20ರಷ್ಟು ಹೆಚ್ಚಿನ ಮಳೆಯಾಗಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಕಳೆದ ಒಂದು ವಾರದಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ತುಂಗಾಭದ್ರಾ ಜಲಾಶಯ ಬಹುತೇಕ ತುಂಬಿದೆ. ಎಲ್ಲಾ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ನಿರಂತರ ನಿಗಾ ವಹಿಸಲಾಗಿದೆ.
67 ಗ್ರಾಮ ಪಂಚಾಯತ್‍ಗಳ 163 ಗ್ರಾಮಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 74 ಪ್ರದೇಶಗಳು ಹಾಗೂ 18 ಮುಖ್ಯ ರಸ್ತೆಗಳನ್ನು ಅತಿವೃಷ್ಟಿಯಿಂದ ತೊಂದರೆ ಉಂಟಾಗಬಹುದಾದ ಸ್ಥಳಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದೆ ಎಂದು ಹೇಳಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments