Breaking News

ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ ಅಗತ್ಯ : ಡಾ.ಸೆಲ್ವಮಣಿ

Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನ ಅಗತ್ಯ : ಡಾ.ಸೆಲ್ವಮಣಿ

ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಬಳಿಕ ಮಕ್ಕಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಸರಿಯಾಗಿ ಮಾರ್ಗದರ್ಶನ ಮಾಡುವ ಕಾರ್ಯವನ್ನು ಮಾಡಬೇಕಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮಕ್ಕಳ ದತ್ತು ಸ್ವೀಕಾರ ಪ್ರಕ್ರಿಯೆಯಂತಹ ಕಾಯ್ದೆಗಳ ಬಗ್ಗೆ ಸರಿಯಾಗಿ ಅರಿವು ಇಲ್ಲದೆ, ಹಲವಾರು ಮಂದಿ ಸಮಸ್ಯೆಗೆ ತುತ್ತಾಗುತ್ತಾರೆ ಎಂದರು.

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಇದು ಯಾವುದೇ ಇಲಾಖೆಗೆ ಸೀಮಿತವಲ್ಲ. ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಸ್ಪಂದಿಸಬೇಕು. ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿ ಶಾಲೆಗಳಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಪ್ರತಿ ಗ್ರಾಮ ಪಂಚಾಯತ್‌ಗಳಲ್ಲಿ ಮಕ್ಕಳ ಗ್ರಾಮಸಭೆಗಳನ್ನು ನಡೆಸಲು ಈಗಾಗಲೇ ಸೂಚಿಸಲಾಗಿದ್ದು, ಈ ಗ್ರಾಮ ಸಭೆಗಳಲ್ಲಿ ಗ್ರಾಮದ ಮಕ್ಕಳ ಸಮಸ್ಯೆಗಳ ಬಗ್ಗೆ, ಅವರ ಅಗತ್ಯಗಳನ್ನು ಪೂರೈಸುವ ಬಗ್ಗೆ ಚರ್ಚೆ ನಡೆದು ಅನುಷ್ಟಾನಗೊಳಿಸುವ ಕಾರ್ಯ ಆಗಬೇಕಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಅವರು ಮಾತನಾಡಿ, ಮಕ್ಕಳ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಕಾನೂನು ಅರಿವು ಕ್ಲಬ್ ರೂಪಿಸಲಾಗುತ್ತಿದೆ. ಈ ಮೂಲಕ ವಾರದಲ್ಲಿ ಒಂದು ದಿನ ಮಕ್ಕಳ ಹಕ್ಕುಗಳ ಕುರಿತಾದ ಕಾನೂನುಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಗುವುದು. ಮೊದಲ ಹಂತದಲ್ಲಿ ಶಿಕ್ಷಕರಿಗೆ ಮೂಲಭೂತ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಇದನ್ನು ಒದಿ : https://cnewstv.in/?p=8358

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*